ಬೆಂಗಳೂರು : ಶುಚಿತ್ವ ಹಾಗೂ ಘನತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸ್ಟಾರ್ ಅಂಬೂರ್ ಬಿರಿಯಾನಿ ಹೋಟೆಲ್ಗೆ ₹1 ಲಕ್ಷ ದಂಡ ವಿಧಿಸಲಾಗಿದೆ.
ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಜಯನಗರ 4ನೇ ಟಿ-ಬ್ಲಾಕ್, ಸ್ವಾಗತ್ ರಸ್ತೆಯಲ್ಲಿರುವ ಸ್ಟಾರ್ ಅಂಬೂರ್ ಬಿರಿಯಾನಿ ಹೋಟೆಲ್ನಲ್ಲಿ ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸದೆ, ಘನತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡದೆ ಇರುವುದು ಪರಿಶೀಲನೆ ವೇಳೆ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆಯ ಘನತ್ಯಾಜ್ಯ ನಿರ್ವಹಣಾ ವಿಭಾಗದಿಂದ ಹೋಟೆಲ್ ಮೇಲೆ ದಾಳಿ ನಡೆಸಲಾಯಿತು.
ದಾಳಿ ವೇಳೆ ಹೋಟೆಲ್ ಒಳಭಾಗದಲ್ಲಿಯೂ ಅಶುಚಿತ್ವ ಕಂಡುಬಂದಿದ್ದು, ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರಿಗೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಜೊತೆಗೆ, ಮುಂದಿನ ದಿನಗಳಲ್ಲಿ ಇಂತಹ ಅಶುಚಿತ್ವ ಪುನರಾವರ್ತನೆಯಾಗದಂತೆ ನೋಡಿಕೊಳ್ಳುವಂತೆ ಕಠಿಣ ಎಚ್ಚರಿಕೆ ನೀಡಲಾಗಿದೆ ಹಾಗೂ ಘನತ್ಯಾಜ್ಯ ನಿರ್ವಹಣೆ ಕುರಿತು ಅಗತ್ಯ ಅರಿವು ಮೂಡಿಸಲಾಗಿದೆ.
ಈ ಕಾರ್ಯಾಚರಣೆಯ ಸಂದರ್ಭದಲ್ಲಿ BSWML AGM ಶ್ರೀಮತಿ ಶ್ವೇತಾ, ಮಾರ್ಷಲ್ ಸೂಪರ್ವೈಸರ್ಗಳು, ಮಾರ್ಷಲ್ಗಳು ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರು ಉಪಸ್ಥಿತರಿದ್ದರು. ನಗರದಲ್ಲಿ ಸಾರ್ವಜನಿಕ ಆರೋಗ್ಯ ಹಾಗೂ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಇಂತಹ ಪರಿಶೀಲನೆಗಳು ಮುಂದುವರಿಯಲಿವೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
