ಬೆಂಗಳೂರು : ಸಾರಿಗೆ ನೌಕರರ ವೇತನ ಪರಿಷ್ಕರಣೆ ಹಾಗೂ ಹಿಂಬಾಕಿ ಕುರಿತಾಗಿ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಂಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಸಾರಿಗೆ ನೌಕರರ ಬೇಡಿಕೆ ಈ ಹಿಂದಿನಿಂದಲೂ ಇತ್ತು. 38 ತಿಂಗಳ ಹಿಂಬಾಕಿ ನೀಡುವಂತೆ ಅವರು ಒತ್ತಾಯಿಸಿದ್ದರು. ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಆಗಬೇಕಿತ್ತು. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಸಚಿವರು ತಿಳಿಸಿದರು.
38 ತಿಂಗಳ ಹಿಂಬಾಕಿಯಲ್ಲಿ 26 ತಿಂಗಳ ಹಿಂಬಾಕಿ ನೀಡಲು ಸರ್ಕಾರ ಒಪ್ಪಿಗೆ ನೀಡಿದ್ದು, 26 ತಿಂಗಳ ಅರಿಯರ್ಸ್ ನೀಡುವುದಾಗಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಉಳಿದ ವಿಚಾರಗಳ ಬಗ್ಗೆ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ವೇತನ ಪರಿಷ್ಕರಣೆ ಸಂಬಂಧಿಸಿದಂತೆ ಸಾರಿಗೆ ಸಂಘಟನೆಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. 2025 ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಜಾರಿಯಾಗಲಿದೆ. ಎಷ್ಟು ಪ್ರಮಾಣದ ವೇತನ ಏರಿಕೆ ಎಂಬುದನ್ನು ಸಂಘಟನೆಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
