0 Shares

ಶಿವಮೊಗ್ಗ : ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ‌ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ‌ ನಿಧನರಾಗಿದ್ದಾರೆ.

ಸಮೀಕ್ಷಾ ರೆಡ್ಡಿ (26) ಮೂಲತಃ ಬೆಂಗಳೂರಿನ ಬನ್ನೇರುಘಟ್ಟ ನಿವಾಸಿ. ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ (ಜಿಕೆವಿಕೆ) ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಮೃಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ತರಬೇತಿ ಪಡೆಯುತ್ತಿದ್ದರು.

ಗುರುವಾರ ರಾತ್ರಿ ಸುಮಾರು 10.30 ರ ಸುಮಾರಿಗೆ ಅವರು ಮೃಗಾಲಯದ ಆಸ್ಪತ್ರೆಗೆ ಹೋಗಿ ಹಕ್ಕಿಯೊಂದಕ್ಕೆ ಚಿಕಿತ್ಸೆ ನೀಡಿದರು. ನಂತರ ಅವರು ಗರ್ಭಿಣಿ ಹಿಪಪಾಟಮಸ್‌ನ ಆವರಣಕ್ಕೆ ಪ್ರವೇಶಿಸಿ ಥರ್ಮಲ್ ಕ್ಯಾಮೆರಾ ಬಳಸಿ ಅದರ ದೇಹದ ಉಷ್ಣತೆಯನ್ನು ಪರಿಶೀಲಿಸಿದರು. ಈ ಸಮಯದಲ್ಲಿ, ನೀರಾನೆ ಅವರ ಮೇಲೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿತು. ತಕ್ಷಣ ಅದನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ರಾತ್ರಿ 11.45ರ ಸುಮಾರಿಗೆ ನಡೆದ ಈ ಘಟನೆಯಲ್ಲಿ ಡಾ.ಸಮೀಕ್ಷಾ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ತುರ್ತಾಗಿ ಶಸ್ತ್ರಚಿಕಿತ್ಸೆಯನ್ನೂ ವೈದ್ಯರು ನಡೆಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸಿದ ಪಶುವೈದ್ಯೆ ಇಂದು ಬೆಳಿಗ್ಗೆ 6:30ರ ಸುಮಾರಿಗೆ ಕೊನೆಯುಸಿರು ಎಳೆದಿದ್ದಾರೆ.

ಗರ್ಭಿಣಿ ಆಗಿದ್ದ ನೀರಾನೆ‌ ಇನ್ಜು ನಾಲ್ಕು ದಿನಗಳಲ್ಲಿ ಅದರ ಹೆರಿಗೆಗೆ ದಿನ ನಿಗದಿಯಾಗಿತ್ತು. ಅದು ರಾತ್ರಿ ಆಹಾರ ಸೇವಿಸಿರದ ಕಾರಣ ಪರಿಶೀಲನೆಗೆ ಡಾ.ಸಮೀಕ್ಷಾ ಅದನ್ನು ಪರೀಕ್ಷಿಸಿಲು ತೆರಳಿದ್ದಾರೆ. ಈ ವೇಳೆ ಆ ನೀರಾನೆ ದಾಳಿ ಮಾಡಿದೆ. ತೀವ್ರ ರಕ್ತ ಸ್ರಾವದಿಂದ ಪ್ರಜ್ಞಾಹೀನರಾಗಿದ್ದ ಅವರನ್ನು ಮೃಗಾಲಯ ಸಿಬ್ಬಂದಿ ಇಲ್ಲಿನ‌ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದರು.

ನೀರಾನೆ ದಾಳಿಯಿಂದ ಪಶು ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದೊಂದು ದುರದೃಷ್ಟಕರ ಘಟನೆ ಎಂದು ಶೋಕ ವ್ಯಕ್ತಪಡಿಸಿರುವ ಅವರು, ಈ ದುಃಖದ ಸಂದರ್ಭದಲ್ಲಿ ಮೃತ ವೈದ್ಯರ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ. ಪ್ರತಿಯೊಂದು ಜೀವವೂ ಅಮೂಲ್ಯ. ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತ ಯುವ ವೈದ್ಯೆಯ ಕುಟುಂಬದವರಿಗೆ ನಿಯಮಾನುಸಾರ ಕೂಡಲೇ ಪರಿಹಾರ ನೀಡುವಂತೆ ಸೂಚಿಸಿರುವ ಅವರು, ರಾಜ್ಯದ ಎಲ್ಲ ಮೃಗಾಲಯಗಳಲ್ಲಿರುವ ಪಶುವೈದ್ಯರು ಯಾವುದೇ ವನ್ಯಜೀವಿಗೆ ಚಿಕಿತ್ಸೆ ನೀಡುವಾಗ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ಪಾಲಿಸಬೇಕು ಎಂದೂ ಸೂಚನೆ ನೀಡಿದ್ದಾರೆ.

ಸಮೀಕ್ಷಾ ರೆಡ್ಡಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಅಲ್ಲಿ ಸುರಕ್ಷತಾ ನಿಯಮಗಳ ಪಾಲನೆಯಾಗಿದ್ದವೇ ಎಂಬುದರ ಬಗ್ಗೆ ತನಿಖೆ ನಡೆಸಿ ಏಳು ದಿನಗಳ ಒಳಗೆ ವರದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

0 Shares

By admin

Leave a Reply

Your email address will not be published. Required fields are marked *