0 Shares

ತುಮಕೂರು : ನಿವೃತ್ತಿ ಹಾಗೂ ಮರಣ ಹೊಂದಿದ ಸರ್ಕಾರಿ ನೌಕರರ ಹೆಸರನ್ನು ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ ಪ್ರಕರಣ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ಅವರನ್ನು ಅಮಾನತು ಮಾಡಲಾಗಿದೆ.

ಪಂಚಾಯಿತಿ ವ್ಯಾಪ್ತಿಯ ನಿವೃತ್ತಿ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ನಗದೀಕರಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನ ಮೊದಲಿಗೆ ಮೂಡಿತ್ತು. ಬಳಿಕ ಬೆಂಗಳೂರಿನ ಕೇಂದ್ರ ಕಚೇರಿಯಿಂದ ನಡೆದ ಆಡಿಟ್ ವೇಳೆ ದಾಖಲೆಗಳಲ್ಲಿ ವ್ಯತ್ಯಾಸ ಪತ್ತೆಯಾಯಿತು. ಈ ಮಾಹಿತಿ ತುಮಕೂರು ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜಾ ಅವರಿಗೆ ತಲುಪಿದ ನಂತರ ಸಮಗ್ರ ಪರಿಶೀಲನೆ ಕೈಗೊಳ್ಳಲಾಯಿತು.

ತನಿಖೆಯಲ್ಲಿ ನೌಕರರ ರೆಸಿಪಿಯಂಟ್ ಐಡಿ ಮತ್ತು ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆದಾರರ ಹೆಸರಿನಲ್ಲಿ ವ್ಯತ್ಯಾಸ ಕಂಡುಬಂದಿದೆ. ಒಟ್ಟು 21 ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, 18 ನಿವೃತ್ತ ಹಾಗೂ 3 ಮರಣ ಹೊಂದಿದ ನೌಕರರ ಹೆಸರನ್ನು ಬಳಸಿಕೊಂಡು ಅಕ್ರಮ ನಡೆದಿದೆ ಎಂಬುದು ಬಹಿರಂಗವಾಗಿದೆ.

ಕಳೆದ ಐದು ವರ್ಷಗಳಲ್ಲಿ 29 ಬ್ಯಾಂಕ್ ಖಾತೆಗಳ ಮೂಲಕ 118 ವ್ಯವಹಾರಗಳ ಮೂಲಕ ಸುಮಾರು 4.24 ಕೋಟಿ ರೂಪಾಯಿ ಸೌಮ್ಯ ಮತ್ತು ಆಕೆಯ ಕುಟುಂಬದ ಐದು ಸದಸ್ಯರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಣವನ್ನು ಹಂತ ಹಂತವಾಗಿ ವರ್ಗಾಯಿಸಿ ಅಂತಿಮವಾಗಿ ಕುಟುಂಬದ ಖಾತೆಗಳಿಗೆ ಸೇರಿಸಲಾಗಿದೆ.

ಈ ಪ್ರಕರಣದಲ್ಲಿ ಇತರ ಅಧಿಕಾರಿಗಳ ಭಾಗವಿರುವ ಸಾಧ್ಯತೆಯೂ ಇದ್ದು, ಅದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಸದ್ಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

0 Shares

By admin

Leave a Reply

Your email address will not be published. Required fields are marked *