ಬೆಂಗಳೂರು : SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕ ವಿವಾದ ತೀವ್ರವಾಗಿದೆ. ಹೈಕೋರ್ಟ್ ಕೂಡ ಗ್ರೇಡಿಂಗ್ ಬದಲು ಅಂಕ ನೀಡಲು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ.
ಹೈಕೋರ್ಟ್ ಮಂಗಳವಾರ ನೀಡಿದ ನಿರ್ದೇಶನದಂತೆ, ಎಸ್ಎಸ್ಎಲ್ಸಿ ಪರೀಕ್ಷೆಯ ತೃತೀಯ ಭಾಷಾ ವಿಷಯಕ್ಕೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂದು ಸೂಚಿಸಿದೆ. ಈ ತೀರ್ಪಿನ ಹಿನ್ನೆಲೆ ಸರ್ಕಾರದ ಮುಂದಿನ ನಡೆ ಏನು ಎಂಬುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಬಂಗಾರಪ್ಪ ಅವರು, “ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನೂ ಪರಿಶೀಲಿಸುತ್ತೇವೆ. ವಿದ್ಯಾರ್ಥಿಗಳು ಆತಂಕಪಡಬಾರದು, ಫಲಿತಾಂಶ ಪ್ರಕಟಣೆಯಲ್ಲಿ ಯಾವುದೇ ವಿಳಂಬವಾಗುವುದಿಲ್ಲ” ಎಂದು ಭರವಸೆ ನೀಡಿದರು.
ಎಸ್ಎಸ್ಎಲ್ಸಿ ಪರೀಕ್ಷೆ–1 ಫಲಿತಾಂಶಗಳನ್ನು ವಿಳಂಬ ಮಾಡದೇ ಹೊರತರುವುದು ಸರ್ಕಾರದ ಆದ್ಯತೆಯಾಗಿದೆ. ಆದ್ದರಿಂದ ಈ ವಿಚಾರವನ್ನು ದೀರ್ಘಗೊಳಿಸುವುದಿಲ್ಲ. ಕಾನೂನು ಸಲಹೆಗಾರರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಈಗಾಗಲೇ ಪ್ರಕಟಿಸಿದ್ದ ಕರಡು ಅಧಿಸೂಚನೆಯನ್ನು ಹಿಂಪಡೆಯಲಾಗುವುದಿಲ್ಲ ಎಂದೂ ಸಚಿವರು ಹೇಳಿದ್ದಾರೆ. ಜನರಿಂದ ಸಲಹೆ ಪಡೆಯಲು ಅದನ್ನು ಪ್ರಕಟಿಸಲಾಗಿತ್ತು. ಹೈಕೋರ್ಟ್ ಕೂಡ ಪರೀಕ್ಷೆ ಆರಂಭಕ್ಕೂ ಮುನ್ನ ಇದ್ದ ನಿಯಮಗಳನ್ನೇ ಅನುಸರಿಸಬೇಕು ಮತ್ತು ಮಧ್ಯದಲ್ಲಿ ಬದಲಾವಣೆ ಮಾಡಬಾರದು ಎಂದು ಹೇಳಿದೆ ಎಂದು ತಿಳಿಸಿದರು.
ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಎ, ಬಿ, ಸಿ ಗ್ರೇಡ್ ನೀಡುವ ಕುರಿತು ಶಿಕ್ಷಣ ಇಲಾಖೆ ಮೊದಲು ಕರಡು ಪ್ರಕಟಿಸಿತ್ತು. ಇದರಿಂದ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಇಳಿಸುವ ಯೋಜನೆ ಕೂಡ ಘೋಷಿಸಲಾಗಿತ್ತು. ಕನ್ನಡ ಪರ ಸಂಘಟನೆಗಳ ಮನವಿಯ ಹಿನ್ನೆಲೆಯಲ್ಲಿ ಹಿಂದಿ ಭಾಷಾ ಪರೀಕ್ಷೆ ರದ್ದುಗೊಳಿಸುವಂತೆ ಒತ್ತಾಯಗಳು ಕೇಳಿಬಂದಿದ್ದವು. ಕಳೆದ ವರ್ಷ ಸುಮಾರು 1.48 ಲಕ್ಷ ವಿದ್ಯಾರ್ಥಿಗಳು ಹಿಂದಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಹಿನ್ನೆಲೆಯಲ್ಲಿ ಗ್ರೇಡ್ ವ್ಯವಸ್ಥೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದರು.
