0 Shares

ಬೆಂಗಳೂರು : ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು. “ರಾಜ್ಯದ ಕಾಂಗ್ರೆಸ್ ಸರ್ಕಾರ ನಾಲಾಯಕ್ ಸರ್ಕಾರ ಎಂದು ಜನರು ಮಾತನಾಡುತ್ತಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಒಂದಾದ ನಂತರ ಒಂದಾಗಿ ಪ್ರಜಾಪ್ರಭುತ್ವ ವಿರೋಧಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ಕಿಡಿಕಾರಿದರು.

ವಿಧಾನಸೌಧದಂತಹ ಪವಿತ್ರ ಸ್ಥಳದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವುದು ಪ್ರಜಾಪ್ರಭುತ್ವದ ಮೇಲೆ ನೇರ ದಾಳಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. “ಇಂಥ ತೀರ್ಮಾನಗಳನ್ನು ಯಾಕೆ ತೆಗೆದುಕೊಳ್ಳುತ್ತಾರೆಂಬುದು ನನಗೆ ಅರ್ಥವಾಗುತ್ತಿಲ್ಲ. ಕಳೆದ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ದ್ವೇಷ ಭಾಷಣ ಸಂಬಂಧ ಕಾಯ್ದೆ ತಂದಿದ್ದರು. ಗಮನಿಸಿ ನೋಡಿದರೆ, ಈ ಸರ್ಕಾರದ ಒಂದೊಂದು ನಿರ್ಣಯವೂ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ” ಎಂದು ಟೀಕಿಸಿದರು.

ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವುದನ್ನು ಬಿಜೆಪಿ ಯಾವ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ ವಿಜಯೇಂದ್ರ, “ಈ ನಿರ್ಧಾರವನ್ನು ರಾಜ್ಯ ಸರ್ಕಾರ ತಕ್ಷಣವೇ ಹಿಂಪಡೆಯಬೇಕು. ಇದು ಖಂಡಿತವಾಗಿಯೂ ಪ್ರಜಾಪ್ರಭುತ್ವ ವಿರೋಧಿ ನಡೆ” ಎಂದು ಹೇಳಿದರು.

ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಗಳ ವಿಚಾರ ಉಲ್ಲೇಖಿಸಿದ ಅವರು, “ಪಾಕಿಸ್ತಾನ ಜಿಂದಾಬಾದ್ ಎಂದು ಜಯಘೋಷ ಕೂಗುವುದಕ್ಕೆ ಕಡಿವಾಣ ಹಾಕಲು ಈ ಅಯೋಗ್ಯ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದರೂ ಪುರಾವೆಗಳಿಲ್ಲ ಎಂದು ಹೇಳಲಾಗಿತ್ತು. ಅಂಥ ದೇಶದ್ರೋಹಿಗಳನ್ನು ಬಂಧಿಸಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ” ಎಂದು ಆಕ್ಷೇಪಿಸಿದರು.

ಇದೀಗ ಸಚಿವರ ಕಚೇರಿಯಲ್ಲಿ ಕಳ್ಳತನ ನಡೆದಿದೆ ಎಂಬ ನೆಪವೊಡ್ಡಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ ಎಂದು ಆರೋಪಿಸಿದ ಅವರು, “ಇದು ಸಂಪೂರ್ಣ ತಪ್ಪು. ಈ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

0 Shares

By admin

Leave a Reply

Your email address will not be published. Required fields are marked *